ಒಳಚರಂಡಿ ಅವ್ಯವಸ್ಥೆಯಿಂದ ಸೊಳ್ಳೆಗಳ ಕಾಟ; ರೋಗಗಳ ಭೀತಿಯಲ್ಲಿ ಅಡವಿಬಾವಿ ದೊಡ್ಡ ತಾಂಡದ ಜನರು..

ಒಳಚರಂಡಿ ಅವ್ಯವಸ್ಥೆಯಿಂದ ಸೊಳ್ಳೆಗಳ ಕಾಟ; ರೋಗಗಳ ಭೀತಿಯಲ್ಲಿ ಅಡವಿಬಾವಿ ದೊಡ್ಡ ತಾಂಡದ ಜನರು
ಕನಕಗಿರಿ: ತಾಲೂಕಿನ ಅಡವಿಬಾವಿ ದೊಡ್ಡ ತಾಂಡದಿಂದ ಮುಸಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಪಕ್ಕದಲ್ಲಿರುವ ಒಳಚರಂಡಿ ಕಳೆದ ಮೂರರಿಂದ ನಾಲ್ಕು ವರ್ಷಗಳಿಂದ ಅವ್ಯವಸ್ಥೆಯಿಂದ ಕೂಡಿದ್ದು, ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ.
ಒಳಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಹಾಗೂ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಅಕ್ಕಪಕ್ಕದ ಮನೆಗಳ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಡೆಂಗ್ಯೂ, ಮಲೇರಿಯಾ, ಟೈಫಾಯ್ಡ್ ಸೇರಿದಂತೆ ವಿವಿಧ ಜ್ವರಗಳ ಭೀತಿ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ ಮತ್ತಷ್ಟು ಹೆಚ್ಚಾಗುತ್ತಿದ್ದು, ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಆರೋಗ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಕೊಳಚೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಿ, ಒಳಚರಂಡಿಯನ್ನು ಸ್ವಚ್ಛಗೊಳಿಸಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಸಮಸ್ಯೆ ಕುರಿತು ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ, ಗೌರಿಪುರ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಕಾರ್ಯರೂಪದ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಳಚೆ ನೀರು, ಸೊಳ್ಳೆಗಳ ಹಾವಳಿ ಹಾಗೂ ದುರ್ವಾಸನೆಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಎದುರಾಗುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಒಳಚರಂಡಿ ಸ್ವಚ್ಛಗೊಳಿಸಿ, ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕಲ್ಪಿಸುವ ಜೊತೆಗೆ ಸೊಳ್ಳೆ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.
ಹಲವು ವರ್ಷಗಳಿಂದ ಸಮಸ್ಯೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಏಕೆ? ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾದ ನಂತರವೇ ಕ್ರಮ ಕೈಗೊಳ್ಳಬೇಕೇ? ಎಂಬ ಪ್ರಶ್ನೆಯನ್ನು ಅಡವಿಬಾವಿ ದೊಡ್ಡ ತಾಂಡದ ನಿವಾಸಿಗಳು ಮುಂದಿಟ್ಟಿದ್ದಾರೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ










