ಪತ್ರಿಕೋದ್ಯಮ

ಕನಕಗಿರಿಯಲ್ಲಿ ಬೀದಿ ನಾಯಿಗಳ ಹಾವಳಿ: ಸಾರ್ವಜನಿಕರಲ್ಲಿ ಆತಂಕ..

ಕನಕಗಿರಿಯಲ್ಲಿ ಬೀದಿ ನಾಯಿಗಳ ಹಾವಳಿ: ಸಾರ್ವಜನಿಕರಲ್ಲಿ ಆತಂಕ

ಈ ತಿಂಗಳಲ್ಲೇ 30ಕ್ಕೂ ಹೆಚ್ಚು ಮಂದಿಗೆ ನಾಯಿ ಕಡಿತ; ಪಟ್ಟಣ ಪಂಚಾಯಿತಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಕನಕಗಿರಿ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ. ಬೀದಿ ನಾಯಿಗಳ ಗುಂಪುಗಳು ರಾತ್ರಿ-ಹಗಲು ಎನ್ನದೆ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿರುವ ಆರೋಪಗಳು ಕೇಳಿಬರುತ್ತಿದ್ದು, ಕೂಡಲೇ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಕನಕಗಿರಿ ಪಟ್ಟಣದ ಕಾಳಿಕಾದೇವಿ ದೇವಸ್ಥಾನದ ಅರ್ಚಕರಾದ ಮಲ್ಲಪ್ಪ ತಂದೆ ಯಮುನಪ್ಪ (56) ಅವರು ರಾತ್ರಿ ದೇವಸ್ಥಾನದ ಪೂಜಾ ಕಾರ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಬೀದಿ ನಾಯಿಯೊಂದು ಏಕಾಏಕಿ ಅವರ ಮೇಲೆ ಕ್ರೂರವಾಗಿ ದಾಳಿ ಮಾಡಿದೆ. ನಾಯಿಯ ದಾಳಿಯಿಂದ ಗಾಯಗೊಂಡ ಮಲ್ಲಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪಟ್ಟಣದಲ್ಲಿ ಬೀದಿ ನಾಯಿಗಳ ಸಮಸ್ಯೆ ಕುರಿತು ಸಾರ್ವಜನಿಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಪದೇಪದೇ ಮಾಹಿತಿ ನೀಡಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತಿದ್ದರೂ ಇದುವರೆಗೂ ಶಾಶ್ವತ ಪರಿಹಾರ ದೊರೆತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಈ ತಿಂಗಳೊಂದರಲ್ಲೇ ಸುಮಾರು 30ಕ್ಕೂ ಹೆಚ್ಚು ಜನರಿಗೆ ಬೀದಿ ನಾಯಿಗಳು ಕಚ್ಚಿದ್ದು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಆತಂಕ

ಬೆಳಗಿನ ಹಾಗೂ ಸಂಜೆ ಸಮಯದಲ್ಲಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಸಣ್ಣ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಬೀದಿ ನಾಯಿಗಳ ಹಾವಳಿಯಿಂದ ಭಯಭೀತರಾಗಿದ್ದಾರೆ. ಗುಂಪು ಗುಂಪಾಗಿ ಸಂಚರಿಸುವ ನಾಯಿಗಳು ಮಕ್ಕಳನ್ನು ಕಂಡು ಬೆನ್ನಟ್ಟುತ್ತಿರುವ ಘಟನೆಗಳು ನಡೆಯುತ್ತಿದ್ದು, ಯಾವುದೇ ಸಮಯದಲ್ಲಿ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ವಿಶೇಷವಾಗಿ ರಾತ್ರಿ ವೇಳೆಯಲ್ಲಿ ದೇವಸ್ಥಾನಗಳು, ಬಡಾವಣೆಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂಟಿಯಾಗಿ ಸಂಚರಿಸುವ ಜನರು ಆತಂಕದಿಂದಲೇ ಮನೆಗೆ ತೆರಳಬೇಕಾದ ಪರಿಸ್ಥಿತಿ ಎದುರಾಗಿದೆ.

ದ್ವಿಚಕ್ರ ವಾಹನ ಸವಾರರಿಗೆ ತಲೆನೋವಾದ ನಾಯಿಗಳು

ಬೀದಿ ನಾಯಿಗಳ ಹಾವಳಿ ಕೇವಲ ಪಾದಚಾರಿಗಳಿಗೆ ಮಾತ್ರವಲ್ಲದೆ ದ್ವಿಚಕ್ರ ವಾಹನ ಸವಾರರಿಗೂ ಸಮಸ್ಯೆಯಾಗಿದೆ. ಬೈಕ್ ಹಾಗೂ ಸ್ಕೂಟರ್‌ಗಳ ಹಿಂದೆ ನಾಯಿಗಳು ಓಡಿಬರುವುದರಿಂದ ಸವಾರರು ಗಾಬರಿಗೊಂಡು ವಾಹನದ ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಇದರಿಂದ ಅಪಘಾತಗಳು ಸಂಭವಿಸುವ ಭೀತಿ ಸಾರ್ವಜನಿಕರಲ್ಲಿ ಮೂಡಿದೆ.

ರಾತ್ರಿ ವೇಳೆಯಲ್ಲಿ ಏಕಾಏಕಿ ರಸ್ತೆಗೆ ಅಡ್ಡಲಾಗಿ ಬರುವ ನಾಯಿಗಳಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ

ಬೀದಿ ನಾಯಿಗಳ ಸಮಸ್ಯೆ ಕುರಿತು ಹಲವು ಬಾರಿ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜನರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಆಡಳಿತ ವ್ಯವಸ್ಥೆ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಾಯಿಗಳ ನಿಯಂತ್ರಣಕ್ಕೆ ಸರ್ಕಾರದ ನಿಯಮಾವಳಿಗಳಂತೆ ಅಗತ್ಯ ಕ್ರಮ, ಸಂತಾನ ನಿಯಂತ್ರಣ, ಅಪಾಯಕಾರಿ ನಾಯಿಗಳ ಕುರಿತು ಸೂಕ್ತ ವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

“ಇದಕ್ಕೆ ಕೊನೆ ಯಾವಾಗ?” ಎಂಬುವುದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಕನಕಪ್ಪ ಮಾಗಡಿ ಕನಕಗಿರಿ ಅವರ ಪ್ರಶ್ನೆ !

“ಪ್ರತಿದಿನ ಬೀದಿ ನಾಯಿಗಳ ಭಯದಲ್ಲೇ ಓಡಾಡುವಂತಾಗಿದೆ. ಇಂದು ಒಬ್ಬರಿಗೆ, ನಾಳೆ ಮತ್ತೊಬ್ಬರಿಗೆ ನಾಯಿ ಕಚ್ಚುವ ಘಟನೆಗಳು ನಡೆಯುತ್ತಿವೆ. ಸಣ್ಣ ಮಕ್ಕಳು, ಶಾಲಾ ಮಕ್ಕಳು ಮತ್ತು ವೃದ್ಧರಿಗೆ ಏನಾದರೂ ಅಪಾಯ ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬೀದಿ ನಾಯಿಗಳ ಹಾವಳಿಗೆ ಕೊನೆ ಯಾವಾಗ?” ಎಂಬುದು ಇದೀಗ ಕನಕಗಿರಿ ಪಟ್ಟಣದ ಜನತೆಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಾರ್ವಜನಿಕರ ಆತಂಕ ನಿವಾರಿಸಬೇಕೆಂಬುದು ನಾಗರಿಕರ ಒಕ್ಕೊರಲಿನ ಆಗ್ರಹವಾಗಿದೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button