ಕನಕಗಿರಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ – ಹದಗೆಟ್ಟ ರಸ್ತೆಗಳು, ಅಕ್ರಮ ಚಟುವಟಿಕೆಗಳ ವಿರುದ್ಧ ರೈತ ಸಂಘದ ಆಕ್ರೋಶ

ಕನಕಗಿರಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ – ಹದಗೆಟ್ಟ ರಸ್ತೆಗಳು, ಅಕ್ರಮ ಚಟುವಟಿಕೆಗಳ ವಿರುದ್ಧ ರೈತ ಸಂಘದ ಆಕ್ರೋಶ
ಕನಕಗಿರಿ, ಜು. 10: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕನಕಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಗದ್ದಿ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಸಮಸ್ಯೆಗಳ ಕುರಿತು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಸತತ ಮಳೆಯ ಕೊರತೆ, ಬೆಳೆ ವೈಫಲ್ಯ ಹಾಗೂ ರೈತರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕನಕಗಿರಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಸಂಘವು ತಾಲೂಕು ಆಡಳಿತ ಕಚೇರಿ ಮುಂದೆ ಪ್ರಕಟಣೆ ಮಾಡಿತ್ತು ಆಗ್ರಹಿಸಿದೆ. ಈಗಾಗಲೇ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದು, ಬೆಳೆಗಳು ಒಣಗಿ ಹೋಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್, ಬೆಳೆ ಪರಿಹಾರ ಮತ್ತು ಸಾಲ ಮರುಪಾವತಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ತಾಲೂಕಿನ ಬಹುತೇಕ ಗ್ರಾಮಗಳ ಪ್ರಮುಖ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು, ರೈತರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಉಂಟಾಗಿದ್ದು, ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಹಲವು ಬಾರಿ ಮನವಿ ಸಲ್ಲಿಸಿದ್ದರೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲಾ ಆಡಳಿತ ಹಾಗೂ ಕ್ಷೇತ್ರದ ಶಾಸಕ ಶಿವರಾಜ್ ತಂಗಡಗಿ ಅವರು ಕನಕಗಿರಿ ತಾಲೂಕಿನ ಅಭಿವೃದ್ಧಿಯತ್ತ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಸಂಘ ಆರೋಪಿಸಿದೆ. ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿದ್ದು, ಮೂಲಸೌಕರ್ಯಗಳ ಕೊರತೆಯಿಂದ ತಾಲೂಕು ಹಿಂದುಳಿದಂತಾಗಿದೆ ಎಂದು ಸಂಘದ ಮುಖಂಡರು ಅಭಿಪ್ರಾಯಪಟ್ಟರು.
ಇದರ ಜೊತೆಗೆ ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳಾದ ಇಸ್ಪೀಟ್ ಜೂಜು, ಮಟ್ಕಾ ದಂಧೆ ಹಾಗೂ ಅಕ್ರಮ ಮರಳು ಸಾಗಣೆ ಹೆಚ್ಚುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸಂಬಂಧಪಟ್ಟ ಇಲಾಖೆಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ಅಕ್ರಮ ಮರಳು ಸಾಗಣೆಯಿಂದ ಭಾರೀ ವಾಹನಗಳ ಸಂಚಾರ ಹೆಚ್ಚಾಗಿ ಗ್ರಾಮೀಣ ರಸ್ತೆಗಳು ಇನ್ನಷ್ಟು ಹಾಳಾಗುತ್ತಿವೆ. ಇದರಿಂದ ಸಾರ್ವಜನಿಕರಿಗೂ ಹಾಗೂ ರೈತರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತಿದೆ ಎಂದು ಸಂಘ ತಿಳಿಸಿದೆ.
ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣವೇ ಬರಪೀಡಿತ ಪ್ರದೇಶ ಘೋಷಣೆ, ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ, ಅಕ್ರಮ ಚಟುವಟಿಕೆಗಳ ನಿಯಂತ್ರಣ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಅಧ್ಯಕ್ಷ ಶರಣಪ್ಪ ಗದ್ದಿ ಎಚ್ಚರಿಕೆ ನೀಡಿದ್ದಾರೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ.





