ಕುಡಿಯುವ ನೀರಿನಲ್ಲಿ ಕಪ್ಪೆ ಮರಿ ಪತ್ತೆ: ಪಟ್ಟಣ ಪಂಚಾಯಿತಿ ವಿರುದ್ಧ ಜನರ ಆಕ್ರೋಶ!

ಕುಡಿಯುವ ನೀರಿನಲ್ಲಿ ಕಪ್ಪೆ ಮರಿ ಪತ್ತೆ: ಪಟ್ಟಣ ಪಂಚಾಯಿತಿ ವಿರುದ್ಧ ಜನರ ಆಕ್ರೋಶ!
ಕನಕಗಿರಿ ಪಟ್ಟಣ ಪಂಚಾಯಿತಿ ವತಿಯಿಂದ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರಿನಲ್ಲಿ ಕಪ್ಪೆ ಮರಿ ಪತ್ತೆಯಾಗಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಪಟ್ಟಣ 17 ನೆ ವಾರ್ಡ್ ಹನುಮೇಶ್ ಚೌಡಕಿ ಅವರ ನಳದಲ್ಲಿ ಬಂದ ದೃಶ್ಯ ಮಕ್ಕಳು ಕುಡಿಯಲಿಕ್ಕೆ ನೀರು ತುಂಬಲು ಬಂದಾಗ ಇದನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ.
ಕುಡಿಯುವ ನೀರಿನ ನಾಳದಲ್ಲಿ ಸ್ವಚ್ಛತೆ ಕಾಪಾಡದೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಪಟ್ಟಣದ ನಿವಾಸಿಗಳು, ಪಟ್ಟಣ ಪಂಚಾಯಿತಿಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡದೆ ಕೂಡಲೇ ನೀರಿನ ಮೂಲ, ಟ್ಯಾಂಕ್‌ಗಳು ಹಾಗೂ ಪೈಪ್‌ಲೈನ್‌ಗಳನ್ನು ಪರಿಶೀಲಿಸಿ ಸ್ವಚ್ಛಗೊಳಿಸಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಲುಷಿತ ನೀರು ಸೇವನೆಯಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾದರೆ ಅದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿರುವ ಸ್ಥಳೀಯರು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



