ಗೌರಿ-ಗಣೇಶ ಹಬ್ಬ: ಶಾಂತಿ ಸುವ್ಯವಸ್ಥೆಗೆ ಅಧಿಕಾರಿಗಳ ಸಭೆ. ಕನಕಗಿರಿ.

ಗೌರಿ-ಗಣೇಶ ಹಬ್ಬ: ಶಾಂತಿ ಸುವ್ಯವಸ್ಥೆಗೆ ಅಧಿಕಾರಿಗಳ ಸಭೆ
ಕನಕಗಿರಿ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಪೊಲೀಸ್ ಠಾಣೆಯಲ್ಲಿ ಪೂರ್ವಭಾವಿ ಶಾಂತಿ ಸಭೆ ನಡೆಯಿತು.
ತಹಶೀಲ್ದಾರ್, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಹಾಗೂ ಹಬ್ಬದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಅಯ್ಯನಗೌಡ, ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಜೆಸಿಬಿ ಮೂಲಕ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಎಲ್ಲ ಗಣೇಶ ಮೂರ್ತಿಗಳ ವಿಸರ್ಜನೆಗೆ ಒಂದೇ ಸ್ಥಳದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು. ವಿಸರ್ಜನಾ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕು ಹಾಗು ಪೊಲೀಸ್ ಇಲಾಖೆ ಇಂದ ಬಂದೋಬಸ್ತ್ ಮಾಡಬೇಕು ಎಂದು ಮನವಿ ಮಾಡಿದರು. ಜೊತೆಗೆ ಹಾಳಾಗಿರುವ ರಸ್ತೆಗಳನ್ನು ಹಬ್ಬದ ಹಿನ್ನೆಲೆಯಲ್ಲಿ ಕನಿಷ್ಠ ಮಟ್ಟದಲ್ಲಾದರೂ ಸುಧಾರಿಸಬೇಕು ಎಂದು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರು.
ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಸುಭಾಷ್ ಮಾತನಾಡಿ, ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಕೆಲವು ದಿನಗಳ ಕಾಲ ಸ್ಥಳೀಯ ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದರು. ಇದರಿಂದ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪಟ್ಟಣದಲ್ಲಿ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಗ್ನಿಶಾಮಕ ವಾಹನದ ವ್ಯವಸ್ಥೆ ಕಲ್ಪಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಅಲ್ಲದೆ ಜಗಳ ಹಾಗೂ ಅಹಿತಕರ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂಬ ಸಲಹೆಯೂ ವ್ಯಕ್ತವಾಯಿತು.
ನಂತರ ಮಾತನಾಡಿದ ಪಟ್ಟಣ ಪೊಲೀಸ್ ಇನ್ಸ್‌ಪೆಕ್ಟರ್ ವೀರಣ್ಣ ಎಂ ಹಳ್ಳಿ, ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಕೆಲವು ನಿಯಮ ಹಾಗೂ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಎಲ್ಲರೂ ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸೋಣ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ತಾಲೂಕು ಆಡಳಿತಾಧಿಕಾರಿ ಚಂದ್ರಶೇಖರ ಗಾಳಿ, ಪಟ್ಟಣ ಪಂಚಾಯಿತಿ ಪ್ರಭಾರಿ ಮುಖ್ಯಾಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ. ರಾಜಶೇಖರ್, ಜೆಸ್ಕಾಂ ಇಲಾಖೆ ಅಧಿಕಾರಿ ಆನಂದ, ಪಿಎಸ್ಐ ಉಮೇಶ್, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ಊರಿನ ಮುಖಂಡರಾದ ಸುಭಾಷ್, ಕನಕಪ್ಪ, ಹನುಮಂತ ರೆಡ್ಡಿ, ಪೃಥ್ವಿಕುಮಾರ್, ಕಂಠೀರಂಗ ನಾಯಕ, ಹನುಮೇಶ್ ವಾಲೇಕರ್, ಬಸವರಾಜ ಕಲ್ಲಿಕೆರೆ, ಹನುಮೇಶ್ ಗಂಗಾಮಾತ್, ಕಿರಣ್ ಕುಮಾರ್ ಸೇರಿದಂತೆ ಅನೇಕ ಯುವಕರು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ






