ಪತ್ರಿಕೋದ್ಯಮ

ಗ್ರಾಮೀಣ ಜನತೆಗೆ ಉದ್ಯೋಗ ನೀಡದಿದ್ದರೆ ಪಿಡಿಒ ಅಮಾನತು: ಸಚಿವ ತಂಗಡಗಿ ಎಚ್ಚರಿಕೆ.

ಗ್ರಾಮೀಣ ಜನತೆಗೆ ಉದ್ಯೋಗ ನೀಡದಿದ್ದರೆ ಪಿಡಿಒ ಅಮಾನತು: ಸಚಿವ ತಂಗಡಗಿ ಎಚ್ಚರಿಕೆ

ಕನಕಗಿರಿ ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಒದಗಿಸುವಲ್ಲಿ ನಿರ್ಲಕ್ಷ್ಯ ತೋರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಅಮಾನತು ಮಾಡುವುದಕ್ಕೂ ಹಿಂಜರಿಯುವುದಿಲ್ಲ ಎಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಬೊಮ್ಮಸಾಗರ ತಾಂಡದಲ್ಲಿ ಶನಿವಾರ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ, ಬಳಿಕ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು, ಪ್ರಸಕ್ತ ಮಳೆ ಕೊರತೆಯ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಕಲ್ಪಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಾದ ರೂಪವಾದ ‘ವಿಬಿ ಜಿ ರಾಮ್ ಜಿ’ ಯೋಜನೆಯಡಿ ಗ್ರಾಮೀಣ ಜನರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಲ್ಪಿಸಬೇಕು. ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗದಂತೆ ಸ್ಥಳೀಯವಾಗಿಯೇ ಕೆಲಸದ ಅವಕಾಶಗಳನ್ನು ಸೃಷ್ಟಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಯ ಕುರಿತು ಗ್ರಾಮೀಣ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸೂಚಿಸಿದ ಸಚಿವರು, ವೈಯಕ್ತಿಕ ಹಾಗೂ ಸಮುದಾಯ ಆಧಾರಿತ ಕಾಮಗಾರಿಗಳಿಗೆ ಇರುವ ಅವಕಾಶಗಳ ಬಗ್ಗೆ ಗ್ರಾಮಸ್ಥರಿಗೆ ಸಮರ್ಪಕ ಮಾಹಿತಿ ನೀಡಬೇಕು. ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆಯುವಂತೆ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.

ಬಸ್ ವ್ಯವಸ್ಥೆ, ಅಧಿಕಾರಿಗಳ ಸ್ಪಂದನೆ ಬಗ್ಗೆ ದೂರು

ಇದೇ ವೇಳೆ ಬೊಮ್ಮಸಾಗರ ತಾಂಡದ ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಗ್ರಾಮಕ್ಕೆ ದಿನಕ್ಕೆ ಕೇವಲ ಒಂದು ಬಾರಿ ಬಸ್ ಸಂಚಾರವಿದ್ದು, ಇದರಿಂದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಅಲ್ಲದೆ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಸಚಿವರಿಗೆ ದೂರಿದರು.

ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ತಂಗಡಗಿ, ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. “ಜನರ ಕಷ್ಟಗಳಿಗೆ ಸ್ಪಂದಿಸದಿದ್ದರೆ ಅಧಿಕಾರಿಗಳಾಗಿ ನೀವು ಇಲ್ಲಿ ಇರುವುದಾದರೂ ಏಕೆ? ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ನೀಡಬೇಕು. ಇಂತಹ ದೂರುಗಳು ಮತ್ತೆ ಬಂದರೆ ಸಹಿಸುವುದಿಲ್ಲ. ಅಗತ್ಯವಿದ್ದರೆ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ತಮ್ಮ ಮನವಿಗಳಿಗೆ ಸ್ಪಂದಿಸದಿದ್ದಲ್ಲಿ ಸಾರ್ವಜನಿಕರು ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು. ಜನರ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ಜನರ ಮೂಲಭೂತ ಅಗತ್ಯಗಳಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ. ರಸ್ತೆ, ಸಾರಿಗೆ, ಉದ್ಯೋಗ ಸೇರಿದಂತೆ ಗ್ರಾಮಸ್ಥರ ಸಮಸ್ಯೆಗಳಿಗೆ ಆದ್ಯತೆ ನೀಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸಂತ್ ಗೌಡ, ತಹಸೀಲ್ದಾರ್ ಚಂದ್ರಶೇಖರ್ ಗಾಳಿ, ಮುಖಂಡರಾದ ನಿರಲೋಟಿ ಸಿದ್ದಪ್ಪ, ವೀರೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ.

Related Articles

Leave a Reply

Your email address will not be published. Required fields are marked *

Back to top button