ಕನಕಗಿರಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ..

ಕನಕಗಿರಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ
ಕನಕಗಿರಿ, ಜು.13: ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ, ಕಲ್ಯಾಣ ಕರ್ನಾಟಕ ವಿಭಾಗದ ವತಿಯಿಂದ ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ವಿವಿಧ ರೈತಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನಕಗಿರಿಯ ನವಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಶ್ರೀ ಪಂಪಣ್ಣ ನಾಯಕ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ “ಬೆಳಗ್ಗೆ ಎದ್ದಾಗ ರೈತನನ್ನು ನೆನೆಯಬೇಕು, ರಾತ್ರಿ ಮಲಗುವಾಗ ದೇಶದ ಯೋಧರನ್ನು ಸ್ಮರಿಸಬೇಕು” ಎಂಬ ಘೋಷಣೆಯೊಂದಿಗೆ ರೈತರು ಮತ್ತು ಮುಖಂಡರು ಸರ್ಕಾರದ ಗಮನ ಸೆಳೆದರು.
ಮನವಿಯಲ್ಲಿ ಕನಕಗಿರಿ ತಾಲೂಕನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಬೇಕು, ಕೃಷ್ಣ ಬಿ-ಸ್ಟ್ರೀಂ ಯೋಜನೆಯ ಪೈಪ್ಲೈನ್ ಬದಲಾವಣೆ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು ಹಾಗೂ ರೈತರ ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು. ಅಲ್ಲದೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.
ಪ್ರತಿಭಟನೆಯ ನಂತರ ಪೊಲೀಸ್ ಸಿಬ್ಬಂದಿ ಉಮೇಶ್ ಅವರ ಉಪಸ್ಥಿತಿಯಲ್ಲಿ ತಾಲೂಕು ಉಪ ತಹಸೀಲ್ದಾರ್ ಸುನಿಲ್ ಅವರಿಗೆ ಮುಖ್ಯಮಂತ್ರಿಗಳ ಹೆಸರಿನ ಮನವಿಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಶರಣಪ್ಪ ದೊಡ್ಡಮನಿ, ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಪಂಪಣ್ಣ ನಾಯಕ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಎಂ. ಹುಲಗಪ್ಪ, ಕನಕಪ್ಪ ತಳವಾರ್ (ಉಡುಮಕಲ್), ಎಎಸ್ಎಸ್ಕೆ ಕನಕಗಿರಿ ತಾಲೂಕು ಅಧ್ಯಕ್ಷ ಸುರೇಶ್ ನಾಯಕ, ಗಂಗಪ್ಪ ಯಾದವ್, ಸಂತೋಷ್ ಕನ್ನಾಳ, ಪವನ್ ಬೋವಿ, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀ ಕಂಪ್ಲಿ ಸೇರಿದಂತೆ ಸಂಘದ ಅನೇಕ ಪದಾಧಿಕಾರಿಗಳು, ರೈತರು ಹಾಗೂ ಹಸಿರುಸೇನೆ ಕಾರ್ಯಕರ್ತರು ಭಾಗವಹಿಸಿದ್ದರು.
ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಉಗ್ರ ಹೋರಾಟಗಳನ್ನು ಕೈಗೊಳ್ಳುವುದಾಗಿ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ






